ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೂಚನೆ

ನಂದಿನಿ ಮೈಸೂರು

*ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೂಚನೆ*

ಮೈಸೂರು ನಗರದ ಹೃದಯ ಭಾಗದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಭವನ ನಿರ್ಮಾಣವು ಅಪೂರ್ಣವಾಗಿರುವ ಹಿನ್ನೆಲೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸೋಮವಾರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೇವರಾಜ ಮೊಹಲ್ಲಾದಲ್ಲಿ ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್‌ ಭವನ ಕಾಮಗಾರಿಯನ್ನು ಅಗತ್ಯವಿರುವ ಅನುದಾನ ಹೊಂದಿಸುವ ಬಗ್ಗೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಬಾಕಿ ಉಳಿದಿರುವ ಕಟ್ಟಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಭವನ ನಿರ್ಮಾಣದ ಜವಾಬ್ದಾರಿ ವಹಿಸಲಾಗಿದ್ದು, ಪ್ರಸ್ತುತ ನಿರ್ಮಾಣ ಕಾಮಗಾರಿಯು ಶೇ.75ರಷ್ಟು ಮುಗಿದಿದೆ. ಬಾಕಿ ಕಾಮಗಾರಿಯನ್ನು ಕೈಗೊಳ್ಳಲು ಸೂಕ್ತ ತಾಂತ್ರಿಕ ಸಮರ್ಥನೆಯೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಭವನವು ಸ್ವಚ್ಛತೆ ಇಲ್ಲದಿರುವುದನ್ನು ಗಮನಿಸಿದ ಸಚಿವರು, ಕೂಡಲೇ ಭವನವನ್ನು ಸ್ವಚ್ಛಗೊಳಿಸಬೇಕು. ಸುತ್ತಲೂ ಬೆಳೆದಿರುವ ಗಿಡಗೆಂಟಿಗಳನ್ನು ತೆರವುಗೊಳಿಸಿ, ಯಾವುದೇ ಅನೈತಿಕ ಚಟುವಟಿಕೆಗೆ ಅವಕಾಶ ಮಾಡಿಕೊಡಬಾರದು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಭೇಟಿಗೂ ಮುನ್ನ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ 10 ಕೋಟಿ ರೂ. ಮುಡಾದಿಂದ 9.5 ಕೋಟಿ ರೂ., ಮಹಾನಗರ ಪಾಲಿಕೆಯಿಂದ 2.5 ಕೋಟಿ ರೂ. ಅನುದಾನ ನೀಡುವಂತೆ ತೀರ್ಮಾನಿಸಲಾಯಿತು.

ಈ ವೇಳೆ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ.ರಾಕೇಶ್‌ ಕುಮಾರ್‌, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮುಡಾ ಆಯುಕ್ತ ದಿನೇಶ್‌ ಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಅಶಾದ್ ಉರ್ ರೆಹ್ಮಾನ್ ಶರೀಫ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *