ನಂದಿನಿ ಮೈಸೂರು
*ಹೆಚ್.ಡಿ.ಕೋಟೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ*
ಮೈಸೂರು,ಜು.15:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಹೆಚ್.ಡಿ.ಕೋಟೆಯ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲೇ ಹೆಚ್ಚಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದವರು ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿ ವಾಸಮಾಡುತ್ತಿದ್ದಾರೆ. ಯಾವುದೇ ಸಮಸ್ಯೆಗಳಿದ್ದರೆ ಕೂಡಲೇ ನನ್ನ ಗಮನಕ್ಕೆ ತನ್ನಿ. ಇಲ್ಲಿನ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.
ಜನರ ಜೀವನೋಪಾಯಕ್ಕೆ ಅನುಕೂಲವಾಗುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಸರ್ಕಾರದಿಂದ ಕೊಡಿಸಲಾಗುವುದು. ಉದ್ಯೋಗ, ಉತ್ಪಾದನೆ, ಆರ್ಥಿಕ ಸ್ವಾವಲಂಬನೆಗೆ ನೆರವಾಗುವಂತೆ ಸರ್ಕಾರವೂ ಕೂಡ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಲಿದೆ ಎಂದು ಹೇಳಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದವರು ಸಹಕಾರ ಸಂಘಗಳನ್ನು ರಚಿಸಿಕೊಂಡು ಆರ್ಥಿಕ, ಸಾಮಾಜಿಕ, ಔದ್ಯೋಗಿಕವಾಗಿ ಮುನ್ನೆಲೆಗೆ ಬರಬೇಕು. ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಬೇಕು ಎಂದು ಸಲಹೆ ನೀಡಿದರು.
ತಾಲ್ಲೂಕಿನಲ್ಲಿ ಪ್ರಗತಿ ಹಂತದಲ್ಲಿರುವ ಅಂಬೇಡ್ಕರ್ ಭವನವನ್ನು ಪೂರ್ಣಗೊಳಿಸಕೊಡಬೇಕೆಂದು ಸಮಾಜದ ಮುಖಂಡರು ಮನವಿ ಮಾಡಿದರು. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಕ್ರಮವಹಿಸಲಾಗುವುದು ಎಂದು ಸಚಿವರು ಆಶ್ವಾಸನೆ ನೀಡಿದರು.