ಪಿರಿಯಾಪಟ್ಟಣ:31 ಜುಲೈ 2022
ನಂದಿನಿ ಮೈಸೂರು
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿಗೊಂಡ ಎನ್.ಪ್ರಭು ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಪಟ್ಟಣದ ತಾ.ಪಂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಕೆ.ಮಹದೇವ್ ಅವರು ಎನ್.ಪ್ರಭು ಅವರನ್ನು ಸನ್ಮಾನಿಸಿ ಮಾತನಾಡಿ ರಾಜಕಾರಣಿ ಹಾಗೂ ಅಧಿಕಾರಿಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಇಬ್ಬರು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಬಹುದು ಎಂದು ತಿಳಿಸಿ ವಯೋ ನಿವೃತ್ತಿಗೊಂಡ ಅಧಿಕಾರಿಗಳ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಕೋರಿದರು.
ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್ ಅವರು ಮಾತನಾಡಿ ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದ್ದು ಸೇವಾವಧಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರರಾಗಬಹುದು ಎಂದರು.
ವಯೋ ನಿವೃತ್ತಿಗೊಂಡ ಎನ್.ಪ್ರಭು ಅವರು ಮಾತನಾಡಿ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸಿದ ವೇಳೆ ಸಾರ್ವಜನಿಕ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ ಅಭಿವೃದ್ಧಿಗೆ ಒತ್ತು ನೀಡಿ ಜನಪರ ಕಾರ್ಯ ನಿರ್ವಹಿಸಲಾಗಿತ್ತು ಎಂದರು.
ಇದೇ ವೇಳೆ ವಯೋ ನಿವೃತ್ತಿಗೊಂಡ ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ವಸಂತ್ ರಾಜ್ ಅವರನ್ನು ಶಾಸಕ ಕೆ.ಮಹದೇವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸನ್ಮಾನಿಸಿ ಬೀಳ್ಕೊಟ್ಟರು.
ಈ ಸಂದರ್ಭ ತಹಸೀಲ್ದಾರ್ ಕೆ.ಚಂದ್ರಮೌಳಿ, ಎಡಿಎಲ್ ಆರ್ ಚಿಕ್ಕಣ್ಣ, ಪಿಡಬ್ಲ್ಯುಡಿ ಎಇಇ ಜಯಂತ್, ಸಿಡಿಪಿಒ ಮಮತಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಜಿ.ಪಂ ಎಇಇ ಹರ್ಷದ್ ಪಾಷಾ, ಪಶುವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಸರ್ವೆ ಅಧಿಕಾರಿ ಎಂ.ಕೆ ಪ್ರಕಾಶ್ ಹಾಗೂ ವಿವಿಧ ಇಲಾಖೆ ಮೇಲಧಿಕಾರಿಗಳು ಸಿಬ್ಬಂದಿ ಇದ್ದರು.