ನಂದಿನಿ ಮನುಪ್ರಸಾದ್ ನಾಯಕ್
ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ.

ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.
ಶ್ರಾವಣ ಮಾಸದಲ್ಲಿ ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ.

ಮಥುರಾ ಕೃಷ್ಣನ ಜನ್ಮಸ್ಥಳ. ಕೃಷ್ಣನು ಹುಟ್ಟಿದೊಡನೆ ತಂದೆ ವಸುದೇವ ಅವನನ್ನು ಸೋದರಮಾವನಾದ ಕಂಸನಿಗೆ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದರಾಜನ ಮನೆಯಲ್ಲಿ ಕೃಷ್ಣನ ನ್ನು ಬಿಟ್ಟು ಬರುತ್ತಾನೆ. ಈ ಕಾರ್ಯಕ್ಕೆ ಪ್ರಕೃತಿಯು ನೆರವಾಗುತ್ತದೆ. ದೇವಕಿ ಕೃಷ್ಣನಿಗೆ ಜನ್ಮ ನೀಡಿದ ತಾಯಿಯಾದರೆ, ಯಶೋದೆ ಅವನನ್ನು ಸಾಕಿ ಬೆಳೆಸಿದ ತಾಯಿ.
ಕೃಷ್ಣಜನ್ಮಾಷ್ಟಮಿಯ ದಿನದಂದು, ಮನೆ ಮತ್ತು ದೇವಾಲಯಗಳನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಕೃಷ್ಣನ ಪುಟ್ಟ ಹೆಜ್ಜೆಗಳನ್ನು ರಂಗೋಲಿಯಲ್ಲಿ ಬರೆದು ಸಂಭ್ರಮಿಸಲಾಗುತ್ತದೆ. ಕೃಷ್ಣನ ವಿಗ್ರಹಗಳನ್ನು ವಿಧವಿಧವಾಗಿ ಅಲಂಕರಿಸಿ, ಬಗೆಬಗೆಯ ತಿಂಡಿಗಳನ್ನು ಮಾಡಿ ಬಾಲ ಕೃಷ್ಣನನ್ನುಪೂಜಿಸಲಾಗುತ್ತದೆ. ಕೆಲವು ಕಡೆ, ಮಧ್ಯರಾತ್ರಿಯವರೆಗೆ ಉಪವಾಸವಿದ್ದು, ನಂತರ ಆಹಾರ ಸ್ವೀಕರಿಸುವ ಸಂಪ್ರದಾಯವಿದೆ. ಉಡುಪಿಯಲ್ಲಿ ಈ ದಿನದಂದು ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ.
ಮೈಸೂರಿನ ವಿವಿಧ ದೇವಾಲಯಗಳಾದ ಜಯನಗರದಲ್ಲಿರುವ ಇಸ್ಕಾನ್ ಟೆಂಪನ್ ನಲ್ಲಿ ಅದ್ದೂರಿಯಾಗಿ ಕೃಷ್ಣನನ್ನ ಪೂಜಿಸುತ್ತಾರೆ. ಬಂದಂತ ಭಕ್ತರಿಗೆ ಪ್ರಸಾದ ವಿತರಿಸಲಾಗುತ್ತಿದೆ. ಮನೆಗಳಲ್ಲಿ ಪುಟ್ಟ ಪುಟ್ಟ ಮಕ್ಕಳಿಗೆ ಶ್ರೀ ಕೃಷ್ಣ ನ ಅಲಂಕಾರ ಮಾಡಿ ಸಂಭ್ರಮಿಸಿದ್ದು ಕಂಡು ಬಂತು.