ಯೋಗ ಕಾರ್ಯಕ್ರಮಕ್ಕೆ 12 ಸಾವಿರ ಜನರ ನೋಂದಣಿ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು:14 ಜೂನ್ 2022

ನಂದಿನಿ ಮೈಸೂರು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ವಿಶ್ವ ಯೋಗ ದಿನ ಕಾರ್ಯಕ್ರಮ ಮೈಸೂರಿನ ಅರಮನೆ ಆವರಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ 15 ಸಾವಿರ ಜನ ಪಾಲ್ಗೊಳ್ಳಲಿದ್ದು 12 ಸಾವಿರ ಜನರ ನೋಂದಣಿಯಾಗಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

ಯೋಗ ದಿನಾಚರಣೆ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

10 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ 17 ಬ್ಲಾಕ್ ಮಾಡಲಾಗಿದೆ. ಎರಡು ಬ್ಲಾಕ್‌ ಗಳನ್ನು ಕಾಯ್ದಿರಿಸಲಾಗಿದೆ. ಯೋಗ ಕಾರ್ಯಕ್ರಮದ ಕುರಿತಂತೆ ಕೇಂದ್ರ ಸರ್ಕಾರದ ಆಯುಷ್ ಇಲಾಖೆ ಅಧಿಕಾರಿಗಳು ಎರಡು, ಮೂರು ಬಾರಿ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು, ಸಚಿವ ಡಾ. ಸುಧಾಕರ್ ಅಧ್ಯಕ್ಷತೆಯಲ್ಲಿ ವರ್ಚ್ಯುವಲ್ ಸಭೆ ಕೂಡ ನಡೆದಿದೆ ಎಂದರು.

ಕೇಂದ್ರ ಸರ್ಕಾರವೇ ಕಾರ್ಯಕ್ರಮವನ್ನು ಆಯೋಜಿಸಲಿದೆ. ವಿದ್ಯಾರ್ಥಿಗಳು, ಕಾರ್ಮಿಕರು, ದಿನಗೂಲಿ ನೌಕರರು, ವಿಶೇಷ ಚೇತನರು ಸೇರಿದಂತೆ ಎಲ್ಲ ವರ್ಗದವರು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಮ್ಯಾಟ್, ಮೊಬೈಲ್ ಪೌಚ್, ಶೂ ಬ್ಯಾಗ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಕೋವಿಡ್ ಹಿನ್ನೆಲೆಯಲ್ಲಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಎರಡು ಡೋಸ್ ಲಸಿಕೆ ತೆಗೆದುಕೊಂಡಿರಬೇಕು ಅಥವಾ 72 ಗಂಟೆ ಮುಂಚಿನ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ಕೇಂದ್ರ ಸರ್ಕಾರದ ನಿರ್ದೇಶನವನ್ನು ರಾಜ್ಯ ಸರ್ಕಾರ ಪಾಲನೆ ಮಾಡಲಿದೆ ಎಂದು ಮಾಹಿತಿ ನೀಡಿದರು.

ಯೋಗದಲ್ಲಿ ಪಾಲ್ಗೊಳ್ಳುವವರಿಗೆ ರಾಜ್ಯ ಸರ್ಕಾರದ ವತಿಯಿಂದ ತಿಂಡಿ ವ್ಯವಸ್ಥೆ ಮಾಡಲಾಗುತ್ತದೆ. ಬೆಳಗ್ಗೆ 5.30 ಗಂಟೆಗೆ ಎಲ್ಲಾ ಗೇಟ್ ಗಳು ಬಂದ್ ಆಗಲಿದೆ. ಜೂನ್ 19ರಂದು ಅಂತಿಮ ಹಂತದ ತಾಲೀಮು ನಡೆಸಲಾಗುತ್ತದೆ. ಭದ್ರತೆ ಸಂಬಂಧ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ ಎಂದು ಹೇಳಿದರು.

ಆರೋಗ್ಯ ಸಚಿವರಾದ ಡಾ. ಸುಧಾಕರ್ ಮಾತನಾಡಿ, ವಿಶ್ವ ಯೋಗ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಕಾರ್ಯಕ್ರಮದ ಸಿದ್ಧತೆಗಳ ಪರಾಮರ್ಶೆ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ಬೀಡುಬಿಡಲಿದ್ದಾರೆ. ಯೋಗ ಕಾರ್ಯಕ್ರಮಕ್ಕೂ ಮುನ್ನ ಮತ್ತು ನಂತರ ಸ್ವಚ್ಚತೆ ಕಾಪಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಯೋಗ ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯಕ್ಕೂ ಸಹಕಾರಿ. ‘ಮಾನವತ್ವ ಉಳಿವಿಗಾಗಿ ಯೋಗ’ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಇದರ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು.

ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಮೈಸೂರು ಪೊಲೀಸ್ ಕಮಿಷನರ್ ಚಂದ್ರಗುಪ್ತ, ಎಸ್ ಪಿ ಚೇತನ್, ಜಿಪಂ ಸಿಇಒ ಪೂರ್ಣಿಮಾ, ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *